ಬುಧವಾರ, ಡಿಸೆಂಬರ್ 02, 2009

ನನ್ನ ಇತ್ತೀಚಿನ ಪುಸ್ತಕ

ನನ್ನ ಇತ್ತೀಚಿನ ಪುಸ್ತಕ:


ಸಾದತ್ ಹಸನ್ ಮಾಂಟೊ (11.5.1972-18.1.1955) ಒಬ್ಬ ಮಹಾನ್ ಹಾಗೂ ವಿವಾದಾಸ್ಪದ ಉರ್ದು ಕತೆಗಾರ. ಭಾರತ, ಪಾಕಿಸ್ತಾನ ವಿಭಜನೆಯಿಂದ ತೀವ್ರ ಆಘಾತಕ್ಕೊಳಗಾದ ಮಾಂಟೊ ಆಗ ತಾನು ಕಂಡ ಕೋಮುಗಲಭೆಗಳ ಅಮಾನವೀಯ ಕ್ರೌರ್ಯದಿಂದ ತತ್ತರಿಸಿಹೋದ. ಕೆಲದಿನಗಳ ಹಿಂದೆಯಷ್ಟೇ ನೆರೆಹೊರೆಯವರು, ಗೆಳೆಯರಾಗಿದ್ದವರು ಪರಸ್ಪರ ಕೊಂದುಕೊಳ್ಳುವ ಅಮಾನವೀಯ, ಕ್ರೌರ್ಯ ಮನೋಭಾವ ಪಡೆದುಕೊಂಡದ್ದು ಮಾಂಟೋನಲ್ಲಿ ಆಘಾತ ಹಾಗೂ ದಿಗ್ಭ್ರಮೆ ಉಂಟುಮಾಡಿತ್ತು. ಭಾರತ, ಪಾಕಿಸ್ತಾನ ವಿಭಜನೆಯಾದಾಗ, ಎರಡೂ ದೇಶಗಳಲ್ಲಿ ನನ್ನ ದೇಶ ಯಾವುದೆಂದು ನಿರ್ಧರಿಸಲು ನನ್ನಿಂದ ಸಾಧ್ಯವಾಗಲೇ ಇಲ್ಲ ಎಂದಿದ್ದಾನೆ. ವಿಭಜನೆಯ ನಂತರ ಪಾಕಿಸ್ತಾನದ ಲಾಹೋರ್ಗೆ ಹೋದ ಮಾಂಟೊ ಅಲ್ಲಿ ಏಳು ವರ್ಷಗಳು ಬದುಕಿದ್ದ. ಏಳು ವರ್ಷಗಳು ಆತನ ಬದುಕಿನ ಸೆಣಸಾಟವೇ ಆಗಿತ್ತು. ಸೆಣಸಾಟದಲ್ಲೂ ಜಗತ್ತಿಗೆ ತನ್ನ ಮಹಾನ್ ಕೃತಿಗಳ ಕಾಣಿಕೆ ನೀಡಿದ. ಏಳೂ ವರ್ಷಗಳ ಬದುಕಿನ ಪಯಣ ಆತನನ್ನು ಸಾವಿಗೆ ಹತ್ತಿರ ಹತ್ತಿರ ಕೊಂಡೊಯ್ದವು. ಮಾಂಟೊ ಸತ್ತಾಗ ಆತನಿಗಿನ್ನೂ 43 ವರ್ಷ ತುಂಬಿರಲಿಲ್ಲ. ಅಷ್ಟರಲ್ಲೇ ಆತ 250ಕ್ಕೂ ಹೆಚ್ಚು ಸಣ್ಣ ಕತೆಗಳನ್ನು (22 ಕಥಾ ಸಂಕಲನಗಳು), ಏಳು ರೇಡಿಯೋ ನಾಟಕ ಸಂಗ್ರಹಗಳನ್ನು, ಮೂರು ಪ್ರಬಂಧ ಸಂಗ್ರಹಗಳನ್ನು ಹಾಗೂ ಒಂದು ಕಿರುಕಾದಂಬರಿಯನ್ನು ರಚಿಸಿದ್ದ. ಆತ ಬದುಕಿನಲ್ಲಿ ಎಲ್ಲವನ್ನೂ ಕಂಡಿದ್ದ- ಅತ್ಯಂತ ಜನಪ್ರಿಯತೆ, ಅಸೀಮ ದ್ವೇಷ, ತಾನು ಬಯಸದ ಅಪಮಾನ ಹಾಗೂ ಎಲ್ಲವನ್ನೂ ತನ್ನ ಕತೆಗಳಲ್ಲಿ ಹೇಳಿದ್ದ- ಜಗತ್ತೇ ತನ್ನನ್ನು ಅದ್ಭುತ ಕತೆಗಾರನೆಂದು ಕೊಂಡಾಡುವಂತೆ. ಈ ಮಹಾನ್ ಕತೆಗಾರನ ಆಯ್ದ ಕತೆಗಳ ಅನುವಾದ:

ಮಾಂಟೊ ಕತೆಗಳು

ಅನುವಾದ: ಜೆ.ಬಾಲಕೃಷ್ಣ

ಪ್ರಕಾಶಕರು: ಲಂಕೇಶ್ ಪ್ರಕಾಶನ, ಬೆಂಗಳೂರು

ಪುಟಗಳು: 121-00

ಬೆಲೆ:ರೂ: 80-00


ಕಾಮೆಂಟ್‌ಗಳಿಲ್ಲ: